ನಕಲಿ ಖಾತೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲು ಆಗ್ರಹ

ಅಂಬೇಡ್ಕರ್ ಸೇವಾ ಸಮಿತಿ, ಕರ್ನಾಟಕ ಅಂಬೇಡ್ಕರ್ ಸೇನೆ ಪ್ರತಿಭಟನೆ: ತಹಶೀಲ್ದಾರ್ ಗೆ
ಮನವಿ

ಚಿಕ್ಕಬಳ್ಳಾಪುರ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಲ ಖಾತೆದಾರರಿಗೆ ಅನ್ಯಾಯ ಎಸಗಿರುವ ಆರೋಪದಡಿ ಕಂದಾಯ ಇಲಾಖೆಯ ನಿವೃತ್ತ ನೌಕರ ರಾಜರತ್ನಂ ವಿರುದ್ಧ ಸಮಗ್ರ ತನಿಖೆ ನಡೆಸಿ ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್ ಸೇನೆ ಹಾಗೂ ಅಂಬೇಡ್ಕರ್ ಸೇವಾ ಸಮಿತಿ ನೇತೃತ್ವದಲ್ಲಿ ಶನಿವಾರ ನಗರದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಆರೋಪಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂದಿ ಹೋಬಳಿಯ ನುಗತಹಳ್ಳಿ, ಕುಡುವತಿ, ತಿಮ್ಮನಹಳ್ಳಿ, ಚಿಕ್ಕಬಳ್ಳಾಪುರ ಕಸಬಾ ಹೋಬಳಿಯ ಹಾರೋಬಂಡೆ ಹಾಗೂ ಶಿಡ್ಲಘಟ್ಟ ತಾಲೂಕಿನ ಕಡದನಕುಂಟೆ ಸೇರಿದಂತೆ ವಿವಿಧ ಗ್ರಾಮಗಳ ಸರ್ವೆ ನಂಬರುಗಳಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಲ ಖಾತೆದಾರರಿಗೆ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದರು. ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿಯ ಅಧ್ಯಕ್ಷ ನಾಗರಾಜ್, ದಲಿತರು ಹಾಗೂ ಬಡ ರೈತರ ಭೂಮಿಗೆ ಸಂಬಂಧಿಸಿದ ದಾಖಲೆಗಳಲ್ಲಿ ಅಕ್ರಮ ಎಸಗಿರುವ ಆರೋಪದಡಿ ರಾಜರತ್ನಂ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.
ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದು, ಸಾರ್ವಜನಿಕ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡು ವಂಚನೆ ಮಾಡಿದವರ ವಿರುದ್ಧ ಯಾವುದೇ ಒತ್ತಡಕ್ಕೆ ಮಣಿಯದೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಿಗೆ ನ್ಯಾಯ ದೊರಕಿಸುವುದು ಜಿಲ್ಲಾಡಳಿತದ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು.ಬಳಿಕ ಪ್ರತಿಭಟನಾಕಾರರು ಉಪತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಆನಂದ್, ಕೃಷ್ಣಮೂರ್ತಿ, ಶಿಡ್ಲಘಟ್ಟ ಶಶಿಕುಮಾರ್, ನುಗುತಹಳ್ಳಿ ಭಾರತಮ್ಮ ಸೇರಿದಂತೆ ನೂರಾರು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *