ಧಾರವಾಡ :- ಜಿಲ್ಲಾಡಳಿತದಿಂದ ಅಕ್ಟೋಬರ್ 2 ರಂದು ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‍ಬಹಾದ್ದೂರ ಶಾಸ್ತ್ರಿಜಿಯವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ಬಗ್ಗೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಇಂದು (ಸೆ.21) ಜರುಗಿದ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾಡಳಿತ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗಾಂಧಿ ಶಾಂತಿ ಪ್ರತಿಷ್ಠಾನ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಕ್ಟೋಬರ್ 2 ರಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅ.2 ರಂದು ಬೆಳಿಗ್ಗೆ 8-30 ಗಂಟೆಗೆ ಜಿಲ್ಲಾಡಳಿತದ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ 9 ಗಂಟೆಗೆ ಆಲೂರು ವೆಂಕಟರಾವ್ ಭವನದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು, ಕಾರ್ಮಿಕ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಚರಕ ನೂಲುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಸಭೆಯಲ್ಲಿ ಜಿಲ್ಲಾ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಸ್. ಸುರೇಶ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಬಿ. ವಿನೋದಕುಮಾರ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮೀಪತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಶಿರಸ್ತೇದಾರ ಎಂ.ಜಿ. ಸೊಲಗಿ, ಅವರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *