ಕೋಲಾರ: ವಿಕಲಚೇತನರಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ದೃಷ್ಠಿದೋಷ ಸೇರಿದಂತೆ ಹಲವು ಬಗೆಯ ವಿಕಲಚೇತನರಿದ್ದು, ಕಣ್ಣಿಗೆ ಕಾಣುವ ಅಥವಾ ಕಾಣದಿರುವ ಅಂಗವಿಕಲತೆಯು ಇರಬಹುದು. ಎಲ್ಲರಿಗೂ ಸಮಸ್ಯೆ ಇದ್ದೆ ಇರುತ್ತದೆ. ಸಮಸ್ಯೆಯನ್ನು ಬದಿಗಿಟ್ಟು ಮುಂದೆ ಸಾಗಬೇಕು ಎಂದು ಮುಖ್ಯಮಂತ್ರಿಗಳ ರಾಜ್ಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ತಿಳಿಸಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ವಿವಿಧ ಸ್ಥಳೀಯ ಸಂಘಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್ ಹೊಸಮನಿ ಮಾತನಾಡಿ, ಅಂಗವಿಕಲರಿಗೆ ದೊರಕಬೇಕಾದ ಹಕ್ಕು, ರಕ್ಷಣೆ ಹಾಗೂ ಸಮಸ್ಯೆ ಬಗೆಹರಿಸಲು ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಇದರ ಬಗ್ಗೆ ವಿಶೇಷ ಚೇತನರಿಗೆ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರ ಸಂಘ-ಸಂಸ್ಥೆಗಳು ಅರಿವು-ಜಾಗೃತಿಯನ್ನು ಮೂಡಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಶಂಕರ್ ವಣಿಕ್ಯಳ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಾರಾಯಣಸ್ವಾಮಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಪ ನಿರ್ದೇಶಕಿ ರಮ್ಯಾ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ವಿಕಲಚೇತನ ಸಂಘ-ಸಂಸ್ಥೆಗಳು ಹಾಗೂ ದಿವ್ಯಾಂಗರು ಉಪಸ್ಥಿತರಿದ್ದರು.

